ವೇಣೂರಿನಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ
ವೇಣೂರಿನಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ
ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿಗೆ ಫೆ.22ರಿಂದ ಮಾರ್ಚ್ 1ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ’ ಎಂದು ಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ ಅಜಿಲ ಹೇಳಿದರು.
ಸೋಮವಾರ ವೇಣೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೈನರ ಸಂಪ್ರದಾಯದಂತೆ ಪ್ರತಿ 12ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷರಾಗಿರುವ ವೇಣೂರಿನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ಮಹಾಮಸ್ತಕಾಭಿಷೇಕ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ 30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಒಂದೇ ಬಾರಿಗೆ ಒಂದು ಸಾವಿರ ಮಂದಿ ಊಟ ಮಾಡುವ ಸಭಾಭವನ, ಸ್ವ-ಸಹಾಯ ಪದ್ಧತಿಯಲ್ಲಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಮೂವತ್ತು ಸಮಿತಿಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಸ್ತಕಾಭಿಷೇಕಕ್ಕೆ ಬೇಕಾದ ಸಕಲದ್ರವ್ಯಗಳನ್ನು ಸಂಗ್ರಹಿಸಲಾಗಿದೆ. ಶುದ್ಧನೀರು, ಸೀಯಾಳ ನೀರು, ಇಕ್ಷುರಸ, ಅರಿಶಿಣ, ಗಂಧ, ಕೇಸರಿ, ಚಂದನ ಮೊದಲಾದ ಮಂಗಳದ್ರವ್ಯಗಳಿಂದ ಅಭಿಷೇಕ ನಡೆಸಲಾಗುವುದು. ಅಮೋಘಕೀರ್ತಿ ಮುನಿಮಹಾರಾಜರು ಮತ್ತು ಅಮರಕೀರ್ತಿ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.