ಬೆಳಗಾವಿ: ‘ಗೃಹಲಕ್ಷ್ಮೀ’ ಹಣದಿಂದ ವಿದ್ಯಾರ್ಥಿಗಳಿಗೆ ‘ಗ್ರಂಥಾಲಯ’ ಕಟ್ಟಿಸಿದ ಮಹಾತಾಯಿ 🙏
ಬೆಳಗಾವಿ: ‘ಗೃಹಲಕ್ಷ್ಮೀ’ ಹಣದಿಂದ ವಿದ್ಯಾರ್ಥಿಗಳಿಗೆ ‘ಗ್ರಂಥಾಲಯ’ ಕಟ್ಟಿಸಿದ ಮಹಾತಾಯಿ 🙏
ಬೆಳಗಾವಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯಿತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಹಾಯವಾಗಲು ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಮಲ್ಲವ್ವ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಡೆವಲಪ್ಮೆಂಟ್ ಕಮಿಷನರ್ ಉಮಾ ಮಹದೇವನ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ಯಾಗ್ ಮಾಡಿದ್ದಾರೆ. ಮಂಟೂರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಮತ್ತು ಹಾಲಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಅವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
13 ತಿಂಗಳಿನಿಂದ ಗೃಹಲಕ್ಷೀ ಹಣ 26 ಸಾವಿರ ರೂಪಾಯಿ ಬಂದಿತ್ತು. ಅದರೊಂದಿಗೆ ಗ್ರಾಮ ಪಂಚಾಯಿತಿ ಮೆಂಬರ್ ಆಗಿರುವ ಕಾರಣಕ್ಕೆ ಮಲ್ಲವ್ವ ಅವರಿಗೆ ಗೌರವ ಧನ ಕೂಡ ಸಿಗುತ್ತದೆ. ಈ ಎಲ್ಲಾ ಹಣವನ್ನು ಒಟ್ಟುಗೂಡಿಸಿ ಅವರು ಒಂದು ಸಣ್ಣ ಪ್ರಮಾಣದ ಗ್ರಂಥಾಲಯ ಕಟ್ಟಿದ್ದಾರೆ. ಈ ಸಣ್ಣ ಗ್ರಂಥಾಲಯಕ್ಕೆ ಒಂದೂವರೆ ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಮಲ್ಲವ್ವ ಭೀಮಪ್ಪ ಮೇಟಿ ತಿಳಿಸಿದ್ದಾರೆ.